ಬೆಂಗಳೂರು, ಆ.24(DaijiworldNews/AK): ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಹಿರಂಗ ಪತ್ರ ಬರೆದಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ 8 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಈ ಸಂಬಂಧ ನ್ಯಾ. ಕೆಂಪಯ್ಯ ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
2014 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ತಾವು ಇದರ ತನಿಖೆಗಾಗಿ ನ್ಯಾಯಮೂರ್ತಿ ಕೆಂಪಣ್ಣರವರ ನೇತೃತ್ವದ ವಿಚಾರಣ ಆಯೋಗವನ್ನು ಕಮಿಷನ್ ಆಫ್ ಎನಕೈರಿ ಆಕ್ಟ್ 1952 ರಂತೆ ರಚಿಸಿದ್ದು, ಅದರಂತೆ ಈ ಆಯೋಗವು ವಿಚಾರಣ ವರದಿಯನ್ನು ಸಹ ನೀಡಿದೆ. ಆಯೋಗಗಳ ತನಿಖಾ ವರದಿಗಳು ಸಾರ್ವಜನಿಕ ದಾಖಲೆಗಳಾಗಿದ್ದು, ಅದನ್ನು ಜನಸಾಮಾನ್ಯರಿಗೆ ದೊರಕುವ ಹಾಗೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಆದರೆ ಇದುವರೆಗೂ ಆಯೋಗದ ವರದಿಯನ್ನು ಬಿಡುಗಡೆ ಮಾಡದೇ ಇರುವುದು ಸಂಶಯಕ್ಕೆ ಕಾರಣವಾಗಿದೆ.
ರಾಜ್ಯದ ಜನಪ್ರತಿನಿಧಿಯಾಗಿ ನಾನು ಸಹ ಈ ವರದಿಯ ಬಿಡುಗಡೆಗಾಗಿ ಕಾಯುತ್ತಿದ್ದೇನೆ. ತಮ್ಮ ಸರ್ಕಾರ ಈ ವರದಿಯನ್ನು ಬಿಡುಗಡೆ ಮಾಡದೇ ಮುಚ್ಚಿಡುವ ಕಾರ್ಯ ಮಾಡುತ್ತಿರುವುದು ನಿಮ್ಮ ಮತ್ತು ನಿಮ್ಮ ಸರ್ಕಾರದ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಕುರಿತು ಸಂಶಯ ಹಾಗೂ ಸಂದೇಹ ಹುಟ್ಟುವಂತೆ ಮಾಡುತ್ತಿದೆ ಎಂದು ಪ್ರಶ್ನೆಸಿದ್ದಾರೆ.