ಬೆಂಗಳೂರು, ಆ.26(DaijiworldNews/AA): ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ವೈರಲ್ ಆಗಿದ್ದು, ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, "ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
"ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದ್ದಾರೆ.