ಬೆಂಗಳೂರು,ಅ.07(DaijiworldNews/AK): ಸಚಿವ ಸಂಪುಟ ಸಭೆಯಲ್ಲಿ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯ ಕುರಿತು ಚರ್ಚಿಸಲು ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವುದೇ ತಕರಾರು ಇಲ್ಲ , ವಿರೋಧವೂ ಇಲ್ಲ. ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಬಿಜೆಪಿಯ ಮೂಲ ಸಿದ್ಧಾಂತ . ಅದನ್ನು ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಕೀಯ ಚದುರಂಗದ ಆಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ
ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಎಂಬ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನು ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.