ಬೆಂಗಳೂರು, ಅ.21(DaijiworldNews/AK):ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ.
ರಾಹುಲ್ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.
ಲೋಕಸಭೆ ಚುನಾವಣೆ ವೇಳೆ ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ವೇಳೆ ತಮ್ಮ ಪ್ರಚಾರ ಭಾಷಣದಲ್ಲಿ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಅವರನ್ನು ಮಾಸ್ ರೇಪಿಸ್ಟ್ ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು.