ಬೆಂಗಳೂರು, ಅ.26(DaijiworldNews/AA): ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮತನಾಡಿದ ಅವರು, ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು 551 ಕೋಟಿ ರೂಪಾಯಿ ತಹಶೀಲ್ದಾರ್ ಖಾತೆಯಲ್ಲಿ ಸುಮಾರು 116 ಕೋಟಿ ಸೇರಿದಂತೆ ಒಟ್ಟು 666 ಕೋಟಿ 96 ಲಕ್ಷ ರೂಪಾಯಿ ಹಣ ಲಭ್ಯವಿದ್ದು, ಹಣವನ್ನು ಸಮಪರ್ಕವಾಗಿ ಬಳಸುವಂತೆ ಆದೇಶಿಸಿದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಜಾನುವಾರು ಸಾವಿಗೀಡಾದ ಪ್ರಕರಣಗಳಲ್ಲಿ ರೈತರಿಗೆ ಒಟ್ಟು 9.60 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಪೂರ್ತಿ ಮನೆ ಹಾನಿಗೀಡಾದ ಪ್ರಕರಣಗಳಲ್ಲಿ 1.20 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನಿರ್ಮಿಸಿಕೊಡಲು ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಇಂದಿನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು. ಸಭೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ, ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.