ಬೆಂಗಳೂರು, ಸೆ.24(Daijiworld News/SS): ಅಕ್ಟೋಬರ್ 21ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಪ್ರಾಮುಖ್ಯತೆ ನೀಡಲು ಜೆಡಿಎಸ್ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, 15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಜೆಡಿಎಸ್'ನಿಂದ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಭಾರತೀಯ ಜನತಾ ಪಕ್ಷ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಹಾಗೂ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದರಿಂದ ದೇವೇಗೌಡ, ಕುಮಾರಸ್ವಾಮಿ, ಎಚ್ ಡಿ ರೇವಣ್ಣ ವಿರುದ್ಧ ಪಕ್ಷದ ಮುಖಂಡರಲ್ಲಿ ಅಸಮಾಧಾನವಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಪ್ರಾಮುಖ್ಯತೆ ನೀಡಲು ಜೆಡಿಎಸ್ ನಿರ್ಧರಿಸಿದೆ.
ಈ ನಡುವೆ ಎಚ್ ಡಿ ದೇವೇಗೌಡರು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅನರ್ಹಗೊಂಡ 15 ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಚುನಾವಣೆ ಹಾಗೂ ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.