ಬೆಂಗಳೂರು, ಮಾ 26 (Daijiworld News/MSP): ಕೊರೊನಾ ವೈರಸ್ ಕಾರಣಕ್ಕಾಗಿ ಭಾರತಾದ್ಯಂತ ಬಂದ್ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಲಾಗಿದೆ, ಆದರೆ ಕೊರೊನಾ ಕಾರಣಕ್ಕಾಗಿ ಪರೀಕ್ಷೆ ರದ್ದು ಮಾಡಲಾಗಿದೆ ಎಂಬುವುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾದಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದು, “ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ” ಎಂದಿದ್ದಾರೆ.
ಕೊರೊನಾ ಕಾರಣದಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಪಿಯುಸಿಯ ಬಾಕಿ ಉಳಿದ ಕೊನೆಯ ಪರೀಕ್ಷೆ ಮುಂದೂಡಲಾಗಿದೆಯಷ್ಟೇ. ಇದನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಬೇಕಾಗಿದ್ದು, ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.