ಬಳ್ಳಾರಿ,ಜೂ 16 (Daijiworld News/MSP): ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರಕಾರ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.
ಬಳ್ಳಾರಿ ತಾಲೂಕಿನ ಮಿಂಚೇರಿ ಬಳಿಯ ರಾಮನಕೊಳ್ಳದ ಬಳಿ ನಡೆಯುತ್ತಿರುವ ಜಲಮೂಲಗಳ ಪುನಶ್ಚೇತನ ಕಾಮಗಾರಿಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೋವಿಡ್ ಗ್ರಾಮೀಣ ಪ್ರದೇಶದಲ್ಲಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ 6021 ಗ್ರಾಪಂಗಳಲ್ಲಿ ಟಾಸ್ಕ್ಫೋರ್ಸ್ ಸಮಿತಿಗಳನ್ನು ರಚಿಸಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ ಸಚಿವ ಈಶ್ವರಪ್ಪ ಅವರು ಈ ಕಾರಣದಿಂದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹರಡಿಲ್ಲ ಎಂದರು.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿನ್ನೆ ಸಮಿತಿ ಸಭೆ ಜರುಗಿದ್ದು, ಅಭ್ಯರ್ಥಿಗಳ ಆಯ್ಕೆಯ ವರದಿಯನ್ನು ಕೇಂದ್ರ ಸಮಿತಿಗೆ ರವಾನಿಸಲಾಗಿದೆ. ನಮ್ಮ ಪಕ್ಷ ನಂಬಿಕೊಂಡ ಬಂದವರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ; ಅವರಿಗೆ ಈಗ ಮತ್ತು ಮುಂದಿನ ದಿನಗಳಲ್ಲಿಯೂ ಅವಕಾಶ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು