ಬೆಂಗಳೂರು, ನ. 04 (DaijiworldNews/MB) : ''ರಾಜ್ಯದಲ್ಲಿ ಶಾಲೆಗಳ ಪುನಾರಾರಂಭದ ಬಗ್ಗೆ ಐದು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಳಿಕ ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಎಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಶಾಲೆ ತೆರೆಯುವ ಬಗ್ಗೆ ಎಲ್ಲಾ ವಲಯದ ಪ್ರತಿಕ್ರಿಯೆ ಪಡೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ'' ಎಂದು ಹೇಳಿದ್ದು, ''ಶಾಲೆ ಪುನಾರಾರಂಭದ ಬಗ್ಗೆ ಮಂಗಳವಾರದ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ'' ಎಂದು ಕೂಡಾ ತಿಳಿಸಿದರು.
''ಎಲ್ಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆ ತೆರೆಯುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಹಂತ ಹಂತವಾಗಿ ಶಾಲೆಗಳನ್ನು ತೆರೆಯುವುದು ಸರಿಯಾದ ಕ್ರಮ ಎಂದು ತಜ್ಞರು ತಿಳಿಸಿದ್ದಾರೆ'' ಎಂದು ಸಚಿವರು ಹೇಳಿದರು.