ಮುಂಬೈ, ನ. 05 (DaijiworldNews/MB) : ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅಕ್ರಮವಾಗಿ ನನ್ನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಹಾಗೆಯೇ ಮಹಾರಾಷ್ಟ್ರದ ಅಲಿಬೌಗ್ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ದ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕೆಂದು ಕೂಡಾ ಮನವಿ ಮಾಡಿದ್ದಾರೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಬುಧವಾರ ಮುಂಜಾನೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್ನ್ನು ಬಂಧಿಸಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಗುರುವಾರ ಗೋಸ್ವಾಮಿ ಪರ ವಕೀಲರು ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ, ''ಗೋಸ್ವಾಮಿ ಬಂಧನ ಅಕ್ರಮವಾಗಿದೆ. ಹಾಗಾಗಿ ಈ ಪ್ರಕರಣದ ವಿಚಾರಣೆಯನ್ನು ಶೀಘ್ರವಾಗಿ ತಡೆಹಿಡಿಯಬೇಕು. ಅರ್ನಬ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಎಫ್ಐಆರ್ ಕೂಡಾ ರದ್ದು ಮಾಡಬೇಕು'' ಎಂದು ಮನವಿ ಮಾಡಿದ್ದಾರೆ.
ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂಎಸ್ ಕಾರ್ಣಿಕ್ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಅಪರಾಹ್ನ ಅರ್ನಬ್ ಅವರ ಅರ್ಜಿ ವಿಚಾರಣೆ ನಡೆಸಲಿದೆ.