ಶಿವಮೊಗ್ಗ, ನ.10 (DaijiworldNews/PY): "ಚುನಾವಣಾ ಫಲಿತಾಂಶದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, "ಚುನಾವಣಾ ಫಲಿತಾಂಶದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದಿರುವ ಸಿದ್ದರಾಮಯ್ಯ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಬೇಕು" ಎಂದಿದ್ದಾರೆ.
"ನಾನು ಕಾಂಗ್ರೆಸ್ಸಿಗರ ಮಾತನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಉಪಚುನಾವಣೆಯಲ್ಲಿನ ಎರಡೂ ಕ್ಷೇತ್ರಗಳಲ್ಲಿಯೂ ಕೂಡಾ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಕೂಡಾ ಬಿಜೆಪಿ ಗೆಲುವು ಸಾಧಿಸಲಿದೆ" ಎಂದು ತಿಳಿಸಿದ್ದಾರೆ.
"ಬಿಜೆಪಿ ಮತ್ತಷ್ಟು ಅಭಿವೃದ್ಧಿಯ ಕಾರ್ಯ ಮಾಡಲಿದ್ದು, ಮುಂದಿನ ಚುನಾವಣೆಯಲ್ಲಿ ಸಂಪೂರ್ಣವಾದ ಬಹುಮತ ಗಳಿಸಲಿದ್ದೇವೆ. ಶಿರಾ ಹಾಗೂ ಆರ್.ಆರ್.ನಗರದ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ" ಎಂದಿದ್ದಾರೆ.
ಬಿಹಾರ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ಮಾಡಿದ ಅವರು, "ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿರುವುದು ಇಲ್ಲಿ ಸಾಬೀತಾಗಿದೆ. ನರೇಂದ್ರ ಮೋದಿ ಅವರು ಮತ್ತೆ ಮತ್ತೆ ಪ್ರಧಾನಿಯಾಗಲಿದ್ದಾರೆ" ಎಂದು ಹೇಳಿದ್ದಾರೆ.