ಕಲಬುರಗಿ, ನ.14 (DaijiworldNews/PY): "ನನಗೆ ಬೀದರ್ನ ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತೇನೆ" ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, "ನಾನು ಬಸವ ಕಲ್ಯಾಣದ ಟಿಕೆಟ್ ಆಕಾಂಕ್ಷಿಯಲ್ಲ. ನನಗೆ ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಂತೆ ಕೆಲಸ ಮಾಡುತ್ತೇನೆ" ಎಂದಿದ್ದಾರೆ.
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಜಯಕ್ಕೆ ಅಧಿಕಾರ ದುರುಪಯೋಗ ಕಾರಣ ಎಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರು ಅವರು, "ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವೈಫಲ್ಯಗಳನ್ನು ತೋರಿಸಿದ್ದೇವೆ. ನಾವು ಎಲ್ಲಿಯೂ ಅಧಿಕಾರವನ್ನು ದುರುಪಯೋಗ ಮಾಡಿಲ್ಲ. ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ತಿಳಿಸಿದ್ದೇವೆ" ಎಂದು ಹೇಳಿದ್ದಾರೆ.