ನವದೆಹಲಿ, ನ 17. (DaijiworldNews/HR): ದೆಹಲಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಮಾರಂಭಗಳಿಗೆ 200 ಜನ ಅತಿಥಿಗಳಿಗೆ ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದ್ದು, ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲು ಅಧಿಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾಗಿದೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, "ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ಡೌನ್ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಕಳುಹಿಸಲಾಗಿದೆ. ಸಮಾರಂಭಕ್ಕೆ 200 ಅತಿಥಿಗಳ ಬದಲು 50 ಅತಿಥಿಗಳು ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ" ಎಂದರು.
ಕೊರೊನಾ ಸೋಂಕು ಕಡಿಮೆಯಾದ ಕಾರಣ ಸಮಾರಂಭಗಳಲ್ಲಿ 200 ಮಂದಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಈಗ ಸೋಂಕಿನ ಪ್ರಮಾಣ ಏರುತ್ತಿರುವುದರಿಂದ ಅತಿಥಿಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.