ನವದೆಹಲಿ, ನ. 19 (DaijiworldNews/MB) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ನೊಂದಿಗೆ ಚರ್ಚಿಸಲು ಬುಧವಾರ ದೆಹಲಿಗೆ ತೆರಳಿದ್ದು ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ ಎಂದು ವರದಿ ತಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಅವರ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಆದರೆ ನಡ್ಡಾರವರು ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ನೀಡಿಲ್ಲ.
ಮುಖ್ಯಮಂತ್ರಿ ಬಿಎಸ್ವೈ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಕೂಡಾ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ ಎಂದು ಕೂಡಾ ತಿಳಿದು ಬಂದಿದೆ.
ನಡ್ಡಾ ಭೇಟಿಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬಿಎಸ್ವೈ, ''ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಹೇಳುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ನಾನು ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ'' ಎಂದು ಹೇಳಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ 100 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಲಾಗಿದೆ.