ಶ್ರೀನಗರ, ನ.21 (DaijiworldNews/HR): ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಹೊರತು ಪಡಿಸಿ ಉಳಿದ ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ನಡೆಸದಂತೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದೆ ಎಂದು ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮಫ್ತಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳು ಒಂದು ಹಂತದವರೆಗೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದರು. ಆದರೆ, ಈ ಪಕ್ಷದ ಅಭ್ಯರ್ಥಿಗಳನ್ನು ಹಲವು ವಸತಿಗೃಹಗಳಲ್ಲಿ ಬಂಧಿಸಿಡಲಾಗಿದೆ. ಈ ಮೂಲಕ ಅವರಿಗೆ ಪ್ರಚಾರ ಮಾಡಲು ಅವಕಾಶ ನೀಡುತ್ತಿಲ್ಲ ಎಂದರು".
ಇನ್ನು ಭದ್ರತೆಯ ನೆಪದಲ್ಲಿ ಪಿಡಿಪಿಯ ಅಭ್ಯರ್ಥಿ ಬಶೀರ್ ಅಹ್ಮದ್ ಅವರನ್ನು ಪಹಲ್ಗಂನಲ್ಲಿ ಬಂಧಿಸಲಾಗಿದ್ದು, ನಾಮಪತ್ರ ಸಲ್ಲಿಸಲು ಇಂದು ಕೊನೆಯದಿನವಾಗಿದ್ದು, ಬಶೀರ್ ಅವರನ್ನು ಬಿಡುಗಡೆ ಮಾಡುವಂತೆ ಮೆಹಬೂಬ ಅವರು ಅನಂತ್ನಾಗ್ ಜಿಲ್ಲೆಯ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.