ಧಾರವಾಡ, ನ.23 (DaijiworldNews/PY): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಸಿಬಿಐ ನ್ಯಾಯಾಲಯ 14 ದಿನಗಳಿಗೆ ವಿಸ್ತರಿಸಿದೆ.
ವಿನಯ್ ಕುಲಕರ್ಣಿ ಅವರನ್ನು ಸಿಬಿಐ ನ.5ರಂದು ಬಂಧಿಸಿದ್ದು, ಮೂರು ದಿನಗಳವರೆಗೆ ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ನ್ಯಾಯಾಲಯಕ್ಕೆ ಒಪ್ಪಿಸಿತ್ತು.
ಸೋಮವಾರಕ್ಕೆ ಬಂಧನದ ಅವಧಿ ಮುಗಿದ ಹಿನ್ನೆಲೆ ವಿನಯ್ ಕುಲಕರ್ಣಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ಪಂಚಾಕ್ಷರಿ ಅವರು ಡಿ.7ರ ತನಕ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ.