ಬೆಂಗಳೂರು, ನ.24 (DaijiworldNews/HR): ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 80 ಪ್ರತಿಶತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮುಂಬರುವ ಚುನಾವಣೆಗೆ ಸಿದ್ಧತೆಗಳನ್ನು ಮಾಡುವ ನಿಟ್ಟಿನಲ್ಲಿ ಸೋಮವಾರ ನಗರದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, "ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಗ್ರಾಮ ಸ್ವರಾಜ್ ಸಮಾವೇಶಗಳನ್ನು ಆಯೋಜಿಸಲು ಪಕ್ಷವು ಪ್ರಸ್ತಾಪಿಸಿದೆ" ಎಂದರು.
ಇನ್ನು "ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಜಾತಿಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಪಕ್ಷ ಅವಕಾಶ ನೀಡುತ್ತದೆ. ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಪಕ್ಷವು ರಾಜ್ಯ ಮಟ್ಟದ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ನಳಿನ್ ಕುಮಾರ್ ಕಟೀಲ್, ಕೆ.ಎಸ್.ಈಶ್ವರಪ್ಪ, ಗೋವಿಂದ್ ಕಾರಜೋಳ, ಲಕ್ಷ್ಮಣ ಸವದಿ ಮತ್ತು ಆರ್ ಅಶೋಕ್ ನೇತೃತ್ವ ವಹಿಸಲಿದ್ದಾರೆ" ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಲು ಅದು ಕೂಡ ಪಕ್ಷಕ್ಕೆ ಸಹಾಯ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಉಪ ಮುಖ್ಯಮಂತ್ರಿಗಳಾದ ಅಶ್ವತ ನಾರಾಯಣ್ ಮತ್ತು ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಮತ್ತು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.