ನವದೆಹಲಿ, ನ. 24 (DaijiworldNews/MB) : ಬುಧವಾರದೊಳಗೆ ನಿವಾರ್ ಚಂಡಮಾರುತವು ದಕ್ಷಿಣ ತಮಿಳುನಾಡು ಕರಾವಳಿಯನ್ನು ಕ್ರಮಿಸಲಿರುವ ಕಾರಣದಿಂದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತಮಿಳುನಾಡು ಮತ್ತು ಪುದುಚೇರಿಯ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಯಾವುದೇ ಸಂದರ್ಭದಲ್ಲೂ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ''ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿಯವರೊಂದಿಗೆ ಪರಿಸ್ಥಿತಿ ಬಗ್ಗೆ ಮಾತನಾಡಿದೆ. ಕೇಂದ್ರದಿಂದ ಎಲ್ಲಾ ಸಾಧ್ಯತೆಯಿರುವ ಬೆಂಬಲ ನೀಡುವ ಭರವಸೆ ನೀಡಿದೆ. ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ'' ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ಕೇಂದ್ರ ಸಚಿವ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ (ಎನ್ಸಿಎಂಸಿ) ಸಭೆಯ ಅಧ್ಯಕ್ಷತೆ ವಹಿಸಿ, ನಿವಾರ್ ಚಂಡಮಾರುತದಿಂದ ಉಂಟಾಗಲಿರುವ ಪರಿಣಾಮದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದರು.
ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಹಾಗೆಯೇ ಮೀನುಗಾರಿಕೆ ನಡೆಸದಂತೆ ಸ್ಥಳೀಯ ಜಿಲ್ಲಾಡಳಿತಗಳು ಮೀನುಗಾರರಿಗೆ ಎಚ್ಚರಿಕೆ ನೀಡಿದೆ.