ಬೆಂಗಳೂರು,ನ.24 (DaijiworldNews/HR): ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಅಭಿವೃದ್ಧಿಗೊಳಿಸುವಂತಹ ಪರಿಕಲ್ಪನೆ ದೇಶದಲ್ಲೇ ಇದೇ ಮೊದಲನೆಯದಾಗಿದ್ದು, ಇದು ಎಲ್ಲರಿಗೂ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ನಡೆದ ರಾಜ್ಯದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದೊಂದಿಗೆ ಎಲ್ಲರೂ ಕೈಜೋಡಿಸಿ ಶಾಲೆಗಳನ್ನು ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಒಂದು ವಿಶಿಷ್ಟ ಕಲ್ಪನೆಯಾಗಿದ್ದು, ಇದರಿಂದ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಯಾಗಲಿದೆ ಎಂದರು.
ಇನ್ನು 2020-21ನೇ ಸಾಲಿನಲ್ಲಿ ಘೋಷಿಸಿರುವಂತೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸದಸ್ಯರು ತಮ್ಮ ಅವಧಿಯಲ್ಲಿ ಕನಿಷ್ಠ ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಅಭಿವೃದ್ಧಿ ಪಡಿಸುವುದು ಸೇರಿದಂತೆ ರಾಜ್ಯದ 34 ಹೆಚ್ಚು ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾನಿಲಯಗಳು, ಶಿಕ್ಷಣ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ದತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಿಜಕ್ಕೂ ಉತ್ತಮ ಕಾರ್ಯವಾಗಿದೆ ಎಂದರು.
ಶಾಲೆಗಳನ್ನು ದತ್ತು ತೆಗೆದುಕೊಂಡವರು ಅಲ್ಲಿಗೇ ಬಿಟ್ಟುಬಿಡಬೇಡಬಾರದು, ದತ್ತು ಪಡೆದುಕೊಂಡ ನಂತರ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಯಾವ ರೀತಿ ಶಿಕ್ಷಣ, ಸೌಲಭ್ಯ ಸಿಗುತ್ತಿದೆ, ಏನೇನು ಆಗಬೇಕಿದೆ, ಶಿಕ್ಷಕರು ಏನು ಮಾಡುತ್ತಿದ್ದಾರೆ ಎಂದು ಗಮನಿಸುತ್ತಿರಬೇಕು ಮತ್ತು ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ತಂದೆತಾಯಂದಿರನ್ನು ಕರೆಸಿ ಮಾತನಾಡುವುದರಿಂದ ಶಾಲೆ, ಮಕ್ಕಳು ಜೊತೆಗೆ ಊರು ಅಭಿವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.