ಬೆಂಗಳೂರು, ನ.26 (DaijiworldNews/PY): "ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವ ಮುನ್ನ ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಬೇಕು" ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, "ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇಲಾಖೆಗಳ ಮಧ್ಯೆ ಸಮನ್ವಯತೆ ಮುಖ್ಯ. ಕೈಗಾರಿಕಾ ಪ್ರದೇಶಕ್ಕೆ ತಲುಪಲು ಹಾಗೂ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಸಲುವಾಗಿ ಅವಶ್ಯವಾಗಿರುವ ಮೂಲಭೂತ ಸೌಕರ್ಯಗಳು ಇಲ್ಲದ ಪ್ರದೇಶಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಆದರೆ, ಇದಕ್ಕೆ ಬದಲಾಗಿ ಕೈಗಾರಿಕಾ ಪ್ರದೇಶಗಳಿಗೆ ತಲುಪಲು ಅವಶ್ಯಕವಿರುವ ರಸ್ತೆಗಳನ್ನು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಬೇಕು" ಎಂದು ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ವಸತಿ ಸಚಿವ ವಿ ಸೋಮಣ್ಣ, "ಕೈಗಾರಿಕಾ ಪ್ರದೇಶದ ರಸ್ತೆಗಳ ಕಾಮಗಾರಿಯ ಆರಂಭದ ವೇಳೆ ಅಗತ್ಯ ಹಣಕಾಸಿನ ಸಹಾಯ ಮಾಡುವುದಾಗಿ ತಿಳಿಸಿದ್ದರು" ಎಂದು ಹೇಳಿದ್ದಾರೆ.