ಬೆಳಗಾವಿ,ನ. 28 (DaijiworldNews/HR): ಕಾಂಗ್ರೆಸ್ , ಜೆಡಿಎಸ್ ಪಕ್ಷಗಳಿಗೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಿರುವವರ ಋಣವನ್ನು ತೀರಿಸುವ ಉದ್ದೇಶದಿಂದ ಅವರೆಲ್ಲರಿಗೂ ಸಚಿವ ಸ್ಥಾನ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿಗೆ ಜನರು ಬಹುಮತ ಕೊಡಲಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದ ಕಾರಣ ನಮ್ಮ ಸರ್ಕಾರ ರಚನೆಯಾಗಿದೆ. ಅವರ ಋಣ ತೀರಿಸುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಹಿರಿಯ ಶಾಸಕರು ಹಾಗೂ ಪಕ್ಷದ ಸಂಘಟನೆಗೆ ಹಿಂದಿನಿಂದಲೂ ಶ್ರಮಿಸಿದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೆನಿಲ್ಲ, ಆದರೆ ಸಚಿವ ಸ್ಥಾನ ಕಡಿಮೆ ಇರುವುದರಿಂದ ಅದೆಲ್ಲವನ್ನೂ ಪಕ್ಷದ ವೇದಿಕೆಯಲ್ಲಿ ಹಿರಿಯರು ಚರ್ಚಿಸಿ ಬಗೆಹರಿಸುತ್ತಾರೆ" ಎಂದರು.
ಇನ್ನು " ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಡ್ಡಗೋಡೆ ಮೇಲೆ ದೀಪ ಇಟ್ಟ ಸ್ಥಿತಿಯಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ. ಕೇಂದ್ರದ ನಾಯಕರಿಗೆ ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸವಿಲ್ಲ" ಎಂದು ಟೀಕಿಸಿದ್ದಾರೆ.
ಸಿದ್ದರಾಯ್ಯನವರು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಹೇಳಿರುವುದು ಹುಚ್ಚು ಹೇಳಿಕೆಯಲ್ಲದೇ ಮತ್ತೇನೂ ಇಲ್ಲ. ನಮ್ಮಲ್ಲಿ ಯಾವುದೇ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.