ಲಕ್ನೋ, ನ.28 (DaijiworldNews/PY): ದೆಹಲಿ ಹಾಗೂ ಹರಿಯಾಣ ಪೊಲೀಸರು ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಹಾಗೂ ಜಲಫಿರಂಗಿ ಬಳಕೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, "ಬಿಜೆಪಿಯನ್ನು ಹೊರತುಪಡಿಸಿ ಬೇರೆ ಯಾವ ಪಕ್ಷವೂ ಕೂಡಾ ಈ ರೀತಿಯಾಗಿ ಮಾಡಿಲ್ಲ" ಎಂದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಹಿಂದೆ ಬಿಜೆಪಿಯವರು ಸಾಲ ಮನ್ನಾ ಮಾತ್ರವಲ್ಲದೇ ರೈತರ ಆದಾಯವನ್ನು ದ್ವಿಗುಣಗೊಳಿಸುವ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದಿದ್ದರು. ಇದೀಗ ಬಿಜೆಪಿಯವರೇ ರೈತರೊಂದಿಗೆ ಈ ರೀತಿ ವರ್ತಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.
ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯ ಸಂದರ್ಭ ರೈತರು ಹಾಗೂ ಪೊಲೀಸರ ನಡುವೆ ಸಂಘರ್ಷ ನಡೆದಿದ್ದು, ಈ ವೇಳೆ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದರು.