ಮದ್ದೂರು,ಡಿ.03 (DaijiworldNews/HR): ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಧರ್ಮ, ಜಾತಿಯ ಯುವಕರನ್ನು ಸೆಳೆಯುವ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು ಜೊತೆಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾ.ಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ" ಎಂದರು.
"ಬಿಜೆಪಿ- ಜೆಡಿಎಸ್ ಮೈತ್ರಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮಾತ್ರ ಸೀಮಿತವಾಗಿದ್ದು, ಜಿಲ್ಲೆಯ ರೈತರಿಗೆ ಹಾಗೂ ಮಂಡ್ಯ ಜಿಲ್ಲೆಯ ಅನುಕೂಲವಾಗಲೆಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಮತ್ತು ಮುಖ್ಯಮಂತ್ರಿ ಯ್ಡಿಯೂರಪ್ಪ ಸೇರಿ ತೀರ್ಮಾನ ಕೈಗೊಂಡಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು "ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷದ ಬೆಂಬಲವಿದೆ ರೈತರಿಗೆ ಎಂದಿಗೂ ಅನ್ಯಾಯವಾಗಲು ನಮ್ಮ ಪಕ್ಷ ಬಿಡುವುದಿಲ್ಲ ನಮ್ಮ ಧ್ವನಿ ರೈತರ ಪರವಾಗಿ ಎಂದಿಗೂ ಇರುತ್ತದೆ" ಎಂದು ಹೇಳಿದ್ದಾರೆ.