ಬೆಳಗಾವಿ,ಡಿ. 04 (DaijiworldNews/HR): ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಷಯದ ಬಗ್ಗೆ ಚರ್ಚೆ ನಡೆಸಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬೆಳಗಾವಿ ವಿಮಾನ ನಿಲ್ದಾಣದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಪಕ್ಷದ ಸಭೆಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮುಂಬರುವ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭಾ ಉಪಚುನಾವಣೆ ಕುರಿತು ಚರ್ಚೆ ನಡೆಸಲಾಗುತ್ತದೆ " ಎಂದರು.
ಇನ್ನು "ಮೊನ್ನೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ನಾವು ಜಯಗಳಿಸಿದ್ದೇವೆ, ಈಗ ಮತ್ತೆ ಎರಡು ವಿಧಾನಸಭೆ, ಒಂದು ಲೋಕಸಭಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಗೆಲ್ಲಬೇಕಿದೆ" ಎಂದು ಹೇಳಿದ್ದಾರೆ.