ನವದೆಹಲಿ, ಡಿ. 04 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಪ್ರತಿಭಟಸುತ್ತಿದ್ದು ಅದಕ್ಕೆ ಕೇಂದ್ರ ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ್ದು, ಆ ದಿನ ದಿಲ್ಲಿಯ ಎಲ್ಲಾ ಟೋಲ್ ಬೂತ್ ಹಾಗೂ ರಸ್ತೆಗಳನ್ನು ಬಂದ್ ಮಾಡುವುದಾಗಿ ಘೋಷಿಸಿವೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಭಾರತ್ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಚ್ ಎಸ್ ಲಾಖೋವಾಲ್ ಸಿಂಘು, "ಡಿಸೆಂಬರ್ 5ರಂದು ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ದಹಿಸಲಾಗುತ್ತದೆ ಮತ್ತು ಡಿ.8ರಂದು ಭಾರತ್ ಬಂದ್ ನಡೆಸಲಾಗುವುದು" ಎಂದರು.
ಇನ್ನು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಈಡೇರಿಸದಿದ್ದರೆ, ರೈತರ ಹೋರಾಟ ದೀರ್ಘಕಾಲದವರೆಗೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ.