ಬೆಂಗಳೂರು, ಡಿ.06 (DaijiworldNews/PY): "ರಾಜ್ಯ ಸರ್ಕಾರ ಮತ್ತೆ ಈ ಬಾರಿಯ ಅಧಿವೇಶನದಲ್ಲಿ ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯಿದೆಗಳ ಮಂಡನೆ ಮಾಡಲಿದ್ದು, ಯಾವುದೇ ಕಾರಣಕ್ಕೂ ಇಂತಹ ಜನವಿರೋಧಿ, ರೈತವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ" ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ರಾಜ್ಯದ ವಿವಿಧ ಜಿಲ್ಲೆಗಳು ಈ ವರ್ಷ ಮೂರು ಬಾರಿ ಪ್ರವಾಹದಿಂದ ಹಾನಿಗೀಡಾಗಿವೆ, ಈವರೆಗೂ ನಷ್ಟಕ್ಕೊಳಗಾದ ಜನರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜೊತೆಗೆ ಅನೇಕ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿಲ್ಲ, ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು" ಎಂದಿದ್ದಾರೆ.
"ಗೃಹ ನಿರ್ಮಾಣ ಯೋಜನೆಗಳಿಗೆ ಅಗತ್ಯ ಹಣ ಬಿಡುಗಡೆ ಮಾಡುತ್ತಿಲ್ಲ. ಬಿಜೆಪಿ ಸರ್ಕಾರ ತಮ್ಮ ಪಕ್ಷದ ಅರ್ಜಿದಾರರನ್ನು ಗುರುತಿಸಿ ಹಣ ಬಿಡುಗಡೆ ಮಾಡುತ್ತಿದೆ. ಇತರೆ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡವರ ಅರ್ಜಿಗಳನ್ನು ಬಾಕಿ ಇಡಲಾಗಿದೆ. ಇದು ಬಡಜನರಿಗೆ ಮಾಡುತ್ತಿರುವ ದ್ರೋಹ" ಎಂದು ಆರೋಪಿಸಿದ್ದಾರೆ.
"ರಾಜ್ಯ ಸರ್ಕಾರ ಮತ್ತೆ ಈ ಬಾರಿಯ ಅಧಿವೇಶನದಲ್ಲಿ ಕಾರ್ಮಿಕ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯಿದೆಗಳ ಮಂಡನೆ ಮಾಡಲಿದ್ದು, ಅವುಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಇಂತಹ ಜನವಿರೋಧಿ, ರೈತವಿರೋಧಿ ಕಾಯ್ದೆಗಳ ಜಾರಿಗೆ ನಾವು ಅವಕಾಶ ನೀಡುವುದಿಲ್ಲ" ಎಂದು ತಿಳಿಸಿದ್ದಾರೆ.
"ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನೌಕರರ ಸಂಬಳ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ನೀಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ" ಎಂದಿದ್ದಾರೆ.
"ಸದ್ಯ ನೀತಿಸಂಹಿತೆ ಜಾರಿಯಲ್ಲಿದ್ದು, ನಾಳೆಯಿಂದ ಗ್ರಾಮ ಪಂಚಾಯತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಈ ವೇಳೆ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆ ಕಾಯ್ದೆಗಳನ್ನು ಜಾರಿಗೆ ತಂದರೆ ಮತದಾರರ ಮೇಲೆ ಪರಿಣಾಮ ಬೀರಲಿದ್ದು, ನೀತಿಸಂಹಿತೆಯ ಉಲ್ಲಂಘನೆಯಾಗಲಿದೆ" ಎಂದು ಹೇಳಿದ್ದಾರೆ.