ಬೆಂಗಳೂರು, ಡಿ. 08 (DaijiworldNews/SM): ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಸ್ಥಾನಕ್ಕೆ ಇದೀಗ ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಫರ್ ಬಂದಿದೆ. ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಶೆಟ್ಟರ್ ಅವರಿಗೆ ಕೇಂದ್ರ ನಾಯಕರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನಂತರ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವುದಾಗಿ ಹೈಕಮಾಂಡ್ ನಿಂದ ಬುಲಾವ್ ಸಿಕ್ಕಿದೆ ಎನ್ನಲಾಗಿದೆ. ಸುರೇಶ್ ಅಂಗಡಿ ಅವರ ನಿಧನದಿಂದ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕದ ಒಂದು ಸ್ಥಾನ ಖಾಲಿ ಉಳಿದಿದ್ದು ಅದನ್ನು ಲಿಂಗಾಯತ ಸಮುದಾಯದ ನಾಯಕರಿಗೆ ನೀಡುವುದು ವರಿಷ್ಠರ ಉದ್ದೇಶವೆಂದು ಹೇಳಲಾಗುತ್ತಿದೆ.
ಜಗದೀಶ್ ಶೆಟ್ಟರ್ ಅವರು ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅನುಭವ ಹೊಂದಿದವರಾಗಿದ್ದಾರೆ. ಅಲ್ಲದೆ, ಪಕ್ಷ ನೀಡಿದ ವಿವಿಧ ಜವಾಬ್ದಾರಿಗಳನ್ನು ಅವರು ನಿಭಾಯಿಸಿದ್ದಾರೆ. ಅವರನ್ನು ಕೇಂದ್ರ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಈಗಿರುವ ಕೊರತೆಯನ್ನು ಭರ್ತಿ ಮಾಡಿಕೊಳ್ಳುವುದು ವರಿಷ್ಠರ ಯೋಚನೆ ಎಂದು ಮೂಲಗಳು ಹೇಳಿವೆ.