ಶ್ರೀನಗರ, ಡಿ.09 (DaijiworldNews/PY): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಪಡೆಯ ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆಯು ಬುಧವಾರ ಬೆಳಗ್ಗೆ ಪುಲ್ವಾಮಾ ನಗರದಲ್ಲಿ ನಡೆದಿದ್ದು, ಖಚಿತ ಮಾಹಿತಿ ಪಡೆದುಕೊಂಡ ಭದ್ರತಾ ಸಿಬ್ಬಂದಿಗಳು ಉಗ್ರರ ಅಡಗುತಾಣದ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ.
ಭದ್ರತಾ ಸಿಬ್ಬಂದಿಗಳು ಉಗ್ರರ ಅಡಗುತಾಣವನ್ನು ಸುತ್ತುವರೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಆ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಉಗ್ರರು ಅಡಗಿದ್ದಾರೆ ಎಂದು ಶಂಕಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.