ಬೆಂಗಳೂರು, ಡಿ. 09 (DaijiworldNews/SM): ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತರಲಾಗಿದ್ದು, ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, "ಬಹುಮತ ಇದೆ ಎಂದು ತಮ್ಮಿಚ್ಛೆಯಂತೆ ನಡೆದುಕೊಳ್ಳಲು ಸರಕಾರ ಹೊರಟಿದೆ. ಜನರಿಗೆ ಸಂಬಂಧಿಸಿದ ವಿಷಯಗಳನ್ನು ಸಮರ್ಪಕವಾಗಿ ಚರ್ಚಿಸಬೇಕು. ಬಳಿಕವೇ ಸರಿಯಾದ ನಿರ್ಣಯ ಕೈಗೊಳ್ಳಬೇಕು. ಹೊರತು ಸಮಾಜ ಒಡೆಯುವುದಲ್ಲ. ಮಸೂದೆ ಜಾರಿ ಆಗಲೇಬಾರದೆಂದು ನಾನು ಹೇಳುವುದಿಲ್ಲ. ಆದರೆ, ಸರಿಯಾಗಿ ಚರ್ಚಿಸಿ ನಿರ್ಧರಿಸಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಸ್ಪೀಕರ್ ಬಗ್ಗೆಯೂ ಅಸಮಾಧಾನ ಹೊರ ಹಾಕಿರುವ ಅವರು, "ಸ್ಪೀಕರ್ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.