ಬೆಂಗಳೂರು,ಡಿ.10 (DaijiworldNews/HR): ಗ್ರಾಮ ಪಂಚಾಯತಿ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕೆಲವೊಂದು ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯ ಸ್ಥಾನಗಳಿಗೆ ಹರಾಜು ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಎಫ್ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳನ್ನು ಹರಾಜು ಮಾಡಲಾಗಿದೆ ಎಂಬ ಆರೋಪಗಳಲ್ಲಿ ನಿಜಾಂಶವಿದ್ದಲ್ಲಿ ಇದೊಂದು ಗಂಭೀರ ದುರ್ನಡತೆ ಮತ್ತು ಅವ್ಯವಹಾರವಾಗುತ್ತದೆ ಎಂದು ಆಯೋಗದ ಕಾರ್ಯದರ್ಶಿ ಹೊನ್ನಾಂಬ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಪತ್ರ ಬರೆದಿದ್ದಾರೆ.
ಇನ್ನು ಜಿಲ್ಲಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಬಿ. ಬಸವರಾಜು, " ಇನ್ನು ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಜನಪ್ರತಿನಿಧಿಗಳ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆ –1993 ಅಡಿಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದ್ದಾರೆ.