ಲಕ್ನೋ, ಡಿ.11 (DaijiworldNews/MB) : ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರಾಮ್ ಲಾಲ್ ರಾಹಿ ಅವರು ಸೀತಾಪುರ ಜಿಲ್ಲೆಯ ಆಸ್ಪತ್ರೆಯಲ್ಲಿ ನಿಧನರಾದರು.
86 ವರ್ಷ ಪ್ರಾಯದ ಅವರಿಗೆ, ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯ ವೈದ್ಯಕೀಯ ಅಧೀಕ್ಷಕ ಎ.ಕೆ.ಅಗರ್ ವಾಲ್, ಅವರಿಗೆ ಕೊರೊನಾ ದೃಢಪಟ್ಟಿದೆ. ಅವರು ಗುರುವಾರ ಸಂಜೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ತಮ್ಮ ಸುಧೀರ್ಘ ಕಾಲದ ರಾಜಕೀಯ ಜೀವನದಲ್ಲಿ ಲಾಲ್ ರಾಹಿ ಅವರು, ನಾಲ್ಕು ಬಾರಿ ಮಿಸ್ರಿಖ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದು ಎರಡು ಬಾರಿ ಹರಗಾಂವ್ ಕ್ಷೇತ್ರದಲ್ಲಿ ಜಯ ಗಳಿಸಿದ್ದರು. ಹಾಗೆಯೇ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಸಂಪುಟದಲ್ಲಿ ಅವರು ಗೃಹ ಖಾತೆ ರಾಜ್ಯ ಸಚಿವರಾಗಿದ್ದರು.
ಪ್ರಸ್ತುತ ಅವರ ಪುತ್ರ ಸುರೇಶ್ ರಾಹಿ ಶಾಸಕರಾಗಿದ್ದಾರೆ.
ಇನ್ನು ರಾಮ್ ಲಾಲ್ ರಾಹಿ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.