ನವದೆಹಲಿ, ಡಿ.11 (DaijiworldNews/MB) : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಡೈಮಂಡ್ ಹಾರ್ಬರ್ಗೆ ತೆರಳುತ್ತಿದ್ದ ಸಂದರ್ಭ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಜೆ.ಪಿ. ನಡ್ಡಾ ಅವರೊಂದಿಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯಾ ಅವರ ಕಾರಿನ ಮೇಲೂ ಕೂಡಾ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕೈಲಾಶ್ ವಿಜಯವರ್ಗಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ದಿಲಿಪ್ ಘೋಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾಳಿಯಲ್ಲಿ ಕನಿಷ್ಠ ಸುಮಾರು 15 ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು, ''ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ, ರಾಜಕೀಯ ಹಿಂಸಾಚಾರ ಮತ್ತು ಇತರ ಅಪರಾಧಗಳನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಲು ಡಿ. 14ರಂದು ಬರುವಂತೆ ಮುಖ್ಯಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ, ಡಿಜಿಪಿ ವೀರೇಂದ್ರ ಅವರಿಗೆ ಸೂಚನೆ ನೀಡಲಾಗಿದೆ'' ಎಂದು ತಿಳಿಸಿದ್ದಾರೆ.