ಕೋಲ್ಕತಾ, ಡಿ. 11 (DaijiworldNews/SM): ಪಶ್ಚಿಮ ಬಂಗಾಳ ಭೇಟಿಯ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕೇಂದ್ರ ಗೃಹ ಸಚಿವಾಲಯ ನೀಡಿದ ಸಮನ್ಸ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಧಿಕ್ಕರಿಸಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಡಿಸೆಂಬರ್ 14ರಂದು ಸಭೆ ಕರೆದು, ಸಭೆಯಲ್ಲಿ "ರಾಜ್ಯ ಅಧಿಕಾರಿಗಳ ಉಪಸ್ಥಿತಿಯೊಂದಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು" ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಡಿಸೆಂಬರ್ 14 ರಂದು ದೆಹಲಿಗೆ ಬರಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.
"ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಡಿಸೆಂಬರ್ 14 ರಂದು ಮಧ್ಯಾಹ್ನ 12.15ಕ್ಕೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಬಂಡೋಪಾಧ್ಯಾಯ ತಿಳಿಸಿದ್ದಾರೆ. ಕೆಲವು ಝೆಡ್ ಕೆಟೆಗರಿ ಭದ್ರತೆ ಸೇರಿದಂತೆ ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು" ಸೂಚಿಸಲಾಗಿದೆ. ಅಲ್ಲದೆ, ಪ. ಬಂಗಾಳ ಸರಕಾರದ ಭದ್ರತಾ ವೈಫಲ್ಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ವಿವರ:
ಇನ್ನು ಪ. ಬಂಗಾಳದ ಡೈಮಂಡ್ ಹಾರ್ಬರ್ಗೆ ಲೋಕಸಭಾ ಕ್ಷೇತ್ರಕ್ಕೆ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುತ್ತಿದ್ದು, ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಜೆಪಿ ನಡ್ಡಾ ಅವರ ಬೆಂಗಾವಲು ಸಿಬ್ಬಂದಿ ಮೇಲೆ ಕಲ್ಲು ಮತ್ತು ದೊಣ್ಣೆಗಳಿಂದ ತೃಣಮೂಲ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎನ್ನುವ ಆರೋಪವಿದೆ. ಘಟನೆಯಲ್ಲಿ ನಡ್ಡಾ ಅವರು ಪಾರಾಗಿದ್ದರೂ, ಅವರೊಂದಿಗಿದ್ದ ಇತರ ನಾಯಕರಾದ ಕೈಲಾಶ್ ವಿಜಯವರ್ಗಿಯಾ ಮತ್ತು ಮುಕುಲ್ ರಾಯ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.