ಬೆಂಗಳೂರು, ಡಿ. 11 (DaijiworldNews/SM): ಸ್ಯಾಂಡಲ್ ವುಡ್ ಡ್ರಗ್ ದಂಧೆ ವಿಚಾರಕ್ಕೆ ಸಂಬಂಧಿಸಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಹಲವು ಬಾರಿ ತಿರಸ್ಕೃತಗೊಂಡಿದ್ದ ಜಾಮೀನು ಕೊನೆಗೂ ಮಂಜೂರಾಗಿದೆ. ಕರ್ನಾಟಕ ಹೈಕೋರ್ಟ್ ಸಂಜನಾಳಿಗೆ ಜಾಮೀನು ನೀಡಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಗಲ್ರಾನಿಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ. ಈ ಬಗ್ಗೆ ವಾಣಿ ವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದರು. ಈ ವರದಿ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ನೀಡಲು ನಿರ್ಧರಿಸಿದೆ.
ಚಿಕಿತ್ಸೆಗೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಕೋರಿ ಸಂಜನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಸಲಾಗಿತ್ತು. ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಅರ್ಜಿ ಪರಿಶೀಲಿಸಿ ಜಾಮೀನು ಮಂಜೂರು ಮಾಡಿದ್ದಾರೆ.
ಸಂಜನಾ ಗಲ್ರಾನಿ ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆ ವರದಿ ಮಾಡಿದೆ. ಚಳಿಗಾಲದಲ್ಲಿ ಇದು ಉಲ್ಬಣವಾಗುವ ಸಾಧ್ಯತೆ ಹೆಚ್ಚಿದೆ. ಹಿಂದೊಮ್ಮೆ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದಾಗಿ ಸಂಜನಾ ಅರ್ಜಿಯಲ್ಲಿ ನಮೂದಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಜನಾಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.