ನವದೆಹಲಿ, ಡಿ.12 (DaijiworldNews/PY): ಕೇಂದ್ರ ಸಚಿವ ಅಮಿತ್ ಶಾ ಅವರು, ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆ ಪೊಲೀಸ್ ಸೇರಿದಂತೆ ರಕ್ಷಣಾ ಸಿಬ್ಬಂದಿ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ, ಪ್ರತಿಭಟನೆಯ ಸಂದರ್ಭ ಯಾವುದೇ ರೀತಿಯಾದ ಗಲಭೆಗಳಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಚರ್ಚೆ ನಡೆಸಿದ್ದಾರೆ.
ಪ್ರತಿಭಟನಾನಿರತ ರೈತರೊಂದಿಗೆ ಗಲಭೆಗೆ ಪ್ರಚೋದನೆ ನೀಡುವ ಕನಿಷ್ಠ 10 ಗುಂಪುಗಳು ಕೂಡಿಕೊಂಡಿರಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮಾಹಿತಿಯ ಮೇರೆಗೆ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಕೇಂದ್ರ ಸರ್ಕಾರ ಅಂಗೀಕಾರ ಮಾಡಿದ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಕಳೆದ 17 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಡಿ.12 ರ ಶನಿವಾರ ರೈತರು ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಹೇಳಿದ್ದಾರೆ.