ಬೆಂಗಳೂರು, ಡಿ.12 (DaijiworldNews/PY): "ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ. ದುರುದ್ದೇಶದ ಹಿನ್ನೆಲೆ ಅವರು ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ ಅವರು, "ಕೋಡಿಹಳ್ಳಿ ಚಂದ್ರಶೇಖರ್ ಅವರು, ರಾಜ್ಯದ ವಿವಿಧ ಕಡೆ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದನೆ ನೀಡಿ ಹಾಗೂ ಆಸ್ತಿ-ಪಾಸ್ತಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ" ಎಂದಿದ್ದಾರೆ.
"ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ದುರದೃಷ್ಟಕರ ವಿಷಯ. ಇದರಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಿದ್ದೇನೆ. ಅವರೂ ಕೂಡಾ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನದಲ್ಲಿದ್ದಾರೆ" ಎಂದು ತಿಳಿಸಿದ್ದಾರೆ.
"ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿರುವುದು ಸರಿಯಲ್ಲ" ಎಂದು ಹೇಳಿದ್ದಾರೆ.
"ಸಾರಿಗೆ ನೌಕರರು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ವಾಪಾಸ್ಸಾಗಬೇಕು. ಬಳಿಕ ಸಚಿವರೊಂದಿಗೆ ಚರ್ಚೆ ನಡೆಸಬೇಕು" ಎಂದಿದ್ದಾರೆ.