ನವದೆಹಲಿ,ಡಿ.15 (DaijiworldNews/HR): ಮುಂಬರುವ 2022ರಲ್ಲಿ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ, ಪಕ್ಷದ ವರಿಷ್ಟ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಒಂದು ವೇಳೆ ಆಪ್ ಗೆ ಅಧಿಕಾರ ಸಿಕ್ಕಿದರೆ ನೆರೆಯ ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರವನ್ನು ರಚಿಸುತ್ತೇವೆ, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಈಗಾಗಲೇ ಪಕ್ಷ ನೀಡಿರುವ ಭರವಸೆಯಂತೆ ಸರ್ಕಾರ ನಡೆಸುತ್ತಿದೆ" ಎಂದರು.
ಇನ್ನು "ಕಳೆದ ಎಂಟು ವರ್ಷಗಳಿಂದ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಸರ್ಕಾರ ನಡೆಸುತ್ತಿದ್ದು, ಪಂಜಾಬ್ ನಲ್ಲಿ ಆಪ್ ಮುಖ್ಯ ವಿಪಕ್ಷವಾಗಿದೆ. ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂಬುದಾಗಿ ಇಂದು ಮತ್ತೊಂದು ಘೋಷಣೆ ಮಾಡುತ್ತಿದ್ದೇನೆ" ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ಕೊಳಕು ರಾಜಕೀಯ ಮತ್ತು ಭ್ರಷ್ಟ ರಾಜಕೀಯ ಮುಖಂಡರಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರವನ್ನು ದೂರಿದ್ದಾರೆ.