ನವದೆಹಲಿ,ಡಿ.18 (DaijiworldNews/HR): ಉತ್ತರ ಪ್ರದೇಶದ ಹತ್ರಸ್ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂದೀಪ್, ಲವಕುಶ, ರವಿ ಹಾಗೂ ರಾಮು ಅವರ ವಿರುದ್ಧ ಸಿಬಿಐ ಹಾಥರಸ್ನ ಸ್ಥಳೀಯ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಮೇಲ್ವರ್ಗಕ್ಕೆ ಸೇರಿದ್ದ ನಾಲ್ವರು ಯುವಕರು ಸೆಪ್ಟೆಂಬರ್ 14ರಂದು ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ನವದೆಹಲಿಯ ಸಫ್ದಾರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.
ನ್ಯಾಯಾಂಗ ಬಂಧನದಲ್ಲಿದ್ದ ನಾಲ್ವರು ಆರೋಪಿಗಳ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು, ಅವರನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಿ, ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಅವರಿಂದ ಅಗತ್ಯ ಮಾಹಿತಿ ಕಲೆಹಾಕಿದ್ದಾರೆ.