ಬೆಂಗಳೂರು, ಡಿ.19 (DaijiworldNews/MB) : ಕೊರೊನಾ ಕಾರಣದಿಂದಾಗಿ ಶಾಲಾ ಕಾಲೇಜುಗಳು ಮಾರ್ಚ್ನಲ್ಲಿ ಬಂದ್ ಆಗಿದೆ. ಈ ಪೈಕಿ ಅಂತಿಮ ಪದವಿ, ಸ್ನಾತಕೋತ್ತರ ತರಗತಿಗಳು ಈಗಾಗಲೇ ಆರಂಭವಾಗಿದೆ. ಇನ್ನು 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಆರಂಭದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಈ ತರಗತಿಗೆ ಸಂಬಂಧಿಸಿ ಕೆಲವೊಂದು ಮಾರ್ಗಸೂಚಿಗಳ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್ ಅವರು ತಿಳಿಸಿದ್ದು, ''ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ, ಸುರಕ್ಷತೆ ದೃಷ್ಟಿಯಿಂದ ಬಿಸಿಯೂಟ ಸದ್ಯಕ್ಕಿಲ್ಲ'' ಎಂದು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವ ಸುಧಾಕರ್ ಅವರು, ''ಕೋವಿಡ್ ಹಿನ್ನೆಲೆಯಲ್ಲಿ ಕಳೆದ 8 ತಿಂಗಳಿನಿಂದ ಮುಚ್ಚಲಾಗಿರುವ ಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುರಕ್ಷತೆ ಎರಡನ್ನೂ ಗಮನದಲ್ಲಿಟ್ಟುಕೊಂಡು, ತಜ್ಞರ ಅಭಿಪ್ರಾಯ ಪರಿಗಣಿಸಿ ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ'' ಎಂದು ತಿಳಿಸಿದ್ದಾರೆ.
''2021ರ ಜನವರಿ 1 ರಿಂದ ರಾಜ್ಯದಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ನಿರ್ಧರಿಸಲಾಗಿದ್ದು, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ನಿರ್ಣಯಿಸಲಾಗುವುದು'' ಎಂದು ಹೇಳಿದ್ದಾರೆ.
''ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣ ಇಲ್ಲದಿರುವ ಕುರಿತು ದೃಢೀಕರಣ ನೀಡಬೇಕಿದೆ'' ಎಂದು ತಿಳಿಸಿದ್ದಾರೆ.
''ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ಸೋಂಕು ಇಲ್ಲದಿರುವ ಬಗ್ಗೆ ವರದಿ ಸಲ್ಲಿಸಬೇಕು. ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಮತ್ತು ಮನೆಯಿಂದಲೇ ಯುಟ್ಯೂಬ್ ಮತ್ತು ಇತರ ಆನ್ಲೈನ್ ಮಾಧ್ಯಮಗಳಿಂದ ಅಭ್ಯಾಸ ಮಾಡಬಹುದು'' ಎಂದು ಮಾಹಿತಿ ನೀಡಿದ್ದಾರೆ.
''ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ಇರಲಿದ್ದು, ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕು. ಭೌತಿಕ ಅಂತರ ಕಾಪಾಡಲು ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿರುವಂತೆ ವ್ಯವಸ್ಥೆ ರೂಪಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಬಿಸಿಯೂಟ ವಿತರಣೆ ಸದ್ಯಕ್ಕೆ ಆರಂಭವಾಗುವುದಿಲ್ಲ'' ಎಂದು ತಿಳಿಸಿದ್ದಾರೆ.
''ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಸಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿಬೇಕೆಂದು ಶಾಲೆ-ಕಾಲೇಜುಗಳ ಆಡಳಿತ ಮಂಡಳಿಯವರಿಗೆ, ಪೋಷಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿ ಮಿತ್ರರಿಗೆ ಮನವಿ ಮಾಡುತ್ತೇನೆ'' ಎಂದಿದ್ದಾರೆ.
ಇದಕ್ಕೂ ಮುನ್ನ ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ''2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ, ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ'' ಎಂದು ತಿಳಿಸಿದ್ದರು.