ಬೆಂಗಳೂರು, ಡಿ.19 (DaijiworldNews/MB) : ''ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ'' ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಮೈಸೂರಿನ ಅರವಿಂದ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮ ಜನಾಧಿಕಾರಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ''ಡಿಡಿ ದೇವರಾಜು ಬಳಿಕ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದು ನಾನೇ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಪಕ್ಷದ ಕೆಲವರು ಹಾಗೂ ಬಿಜೆಪಿ, ಜೆಡಿಎಸ್ನವರು ಒಳ ಒಪ್ಪಂದ ಮಾಡಿಕೊಂಡು ನನ್ನನ್ನ ಸೋಲಿಸಿದ್ದಾರೆ'' ಎಂದು ಹೇಳಿದ್ದರು. ಆ ಬಳಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯನವರು ಕೆಲವು ರಾಜ್ಯ ನಾಯಕರ ಬಗ್ಗೆ ಮಾತನಾಡಿದ್ದಾರೆ ಎಂದು ವರದಿಯಾಗಿತ್ತು.
ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ''ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ'' ಎಂದು ತಿಳಿಸಿದ್ದಾರೆ.
ಹಾಗೆಯೇ, ''ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ'' ಎಂದು ಈ ಸಂದರ್ಭದಲ್ಲೇ ಟ್ವೀಟ್ ಮೂಲಕ ತಿಳಿಸಿದ್ದಾರೆ.