ಪಶ್ಚಿಮ ಬಂಗಾಳ, ಡಿ.21 (DaijiworldNews/HR): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಭದ್ರತೆ ಒದಗಿಸುವ ಜವಾಬ್ದಾರಿ ಹೊತ್ತಿದ್ದ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಂಡಿರುವುದನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಸೇವೆಗೆ ವರ್ಗಾವಣೆ ಮಾಡುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ ಎಂದು ಹೇಳಿದ್ದಾರೆ.
ಈ ಕುರಿತು ಜೆ.ಪಿ.ನಡ್ಡಾ ಮತ್ತು ಅವರ ಬೆಂಬಲಿಗರು ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಾ, "ಮಮತಾ ಸರ್ಕಾರವು ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಕುಸಿತ ಕಾಣುತ್ತಿದೆ ರಾಜ್ಯ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬ್ಯಾನರ್ಜಿ ಮತ್ತು ಆಡಳಿತಾರೂಢ ಟಿಎಂಸಿ ಚರ್ಚಿಸುತ್ತಿದ್ದಾರೆ" ಎಂದರು.
ಇನ್ನು "ರಾಜ್ಯ ಸರ್ಕಾರದಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಸೇವೆಗೆ ಸಮನ್ಸ್ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ಅವರಿಗೆ ಆ ಕುರಿತು ಏನಾದರೂ ಅನುಮಾನ ಇದ್ದಲ್ಲಿ ಅವರು ಕಾನೂನು ಪುಸ್ತಕದ ಮೊರೆ ಹೋಗಬಹುದು" ಎಂದು ಹೇಳಿದ್ದಾರೆ.