ಬೆಂಗಳೂರು, ಡಿ.22 (DaijiworldNews/HR): "ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್.ಟಿ) ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಮತ್ತು ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಆಗಿರುವಂತಹ ಸಮಸ್ಯೆಗಳ ನಿವಾರಣೆಗಾಗಿ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸಬೇಕು" ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ವಿಚಾರದಲ್ಲಿ ಅನೇಕ ವರ್ಷಗಳಿಂದ ಸಮಸ್ಯೆಯಾಗುತ್ತಲೇ ಇದೆ, ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನತೆಗಳಿಂದಾಗಿ ನ್ಯಾಯಾಲಯಗಳು ಕೂಡಾ ಈ ಸಮಸ್ಯೆಯನ್ನು ಪರಿಹರಿಸಲು ಹಲವು ವರ್ಷಗಳನ್ನು ತೆಗೆದುಕೊಂಡಿದ್ದವು. ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಈ ವರ್ಗಗಳ 15 ಕ್ಕೂ ಹೆಚ್ಚು ನೌಕರರು ಆತ್ಮಹತ್ಯೆ ಮಾಡಿಕೊಂಡರು, ಅನ್ಯಾಯಕ್ಕೆ ಒಳಗಾಗಿರುವ ನೌಕರರ ಹಿತ ಕಾಪಾಡಬೇಕು" ಎಂದರು.
ಇನ್ನು "ಎಸ್.ಸಿ, ಎಸ್.ಟಿ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆ ಜಾರಿಗೆ ತರಲಾಯಿತು. ಸುಪ್ರೀಂ ಕೋರ್ಟ್ ಕೂಡಾ ಈ ಕಾಯ್ದೆಯನ್ನು ಎತ್ತಿ ಹಿಡಿದಿದ್ದು, ಇದರಿಂದಾಗಿ ಒಂದು ಲಕ್ಷಕ್ಕೂ ಅಧಿಕ ನೌಕರರು ಸ್ವಲ್ಪ ನಿರಾಳಲಾಗಿದ್ದರು. ಆದರೆ ಇದೀಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮುದಾಯಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ" ಎಂದು ಪತ್ರದಲ್ಲಿ ಬರೆದಿದ್ದಾರೆ.