ಬೆಂಗಳೂರು,ಡಿ.24 (DaijiworldNews/HR): ಕೊರೊನಾ ಕಾರಣದಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24x7 ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸಲಾಗುವುದು" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಬಳಿಕ ಮಾತನಾಡಿದ ಅವರು, "ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದರೊಂದಿಗೆ ಎಲ್ಲ ಸೇವೆಯನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ, ಆರೋಗ್ಯ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಸುಸಜ್ಜಿತವಾಗಿದ್ದು, ಉತ್ತಮ ಆರೋಗ್ಯ ಸೇವೆಗಳು ಎಲ್ಲ ಹಂತಗಳ ಆರೋಗ್ಯ ಕೇಂದ್ರಗಳಲ್ಲಿ ದೊರಕುವಂತಾಗಬೇಕು" ಎಂದರು.
ಇನ್ನು "ಕೊರೊನಾದ ಎರಡನೇ ಅಲೆ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದರ ನಿಯಂತ್ರಣಕ್ಕೆ ಆಸ್ಪತ್ರೆಗಳು ಸಜ್ಜಾಗಬೇಕಿದೆ. ಇದಕ್ಕೆ ಪೂರಕವಾಗಿ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ಸಮಾಜದ ಎಲ್ಲಾ ನಾಗರಿಕರಿಗೂ ಆರೋಗ್ಯ ರಕ್ಷಣೆ ಸೇವೆಗಳನ್ನು ಒದಗಿಸುವ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಮೂಲಕ ಸಾರ್ವಜನಿಕರಿಗೆ ಹೆಚ್ಚು ಅನುಕೂಲ ಉಂಟು ಮಾಡುವುದು ಸರ್ಕಾರದ ಉದ್ದೇಶವಾಗಿದೆ" ಎಂದು ಹೇಳಿದ್ದಾರೆ.