ಬೆಂಗಳೂರು, ಡಿ. 28(DaijiworldNews/SM): ಹೊಸ ರೂಪಾಂತರದ ಕೊರೋನಾ ವೈರಸ್ ರಾಜ್ಯದಲ್ಲಿ ಹರಡುವುದನ್ನು ತಡೆಯುವ ಉದ್ದೇಶದಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ ಡಿಸೆಂಬರ್ 31ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಪಂತ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿಸೆಂಬರ್ 31ರ ಸಂಜೆಯಿಂದ ನಿಷೇಧಾಜ್ಞೆ ಜಾರಿಗೆ ಬರಲಿದೆ. ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯ ತಕನ ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ ಎಂದರು.
ಇಡೀ ಬೆಂಗಳೂರಿನಲ್ಲಿ ನಾಕಾಬಂದಿ ಇರಲಿದೆ. ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಕಮಲ್ಪಂತ್ ತಿಳಿಸಿದ್ದಾರೆ.