ಬೆಂಗಳೂರು, ಡಿ. 30 (DaijiworldNews/MB) : ಕರ್ನಾಟಕದ ಒಟ್ಟು 226 ತಾಲ್ಲೂಕುಗಳ 91,339 ಸ್ಥಾನಗಳಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಧ್ಯಾಹ್ನದವರೆಗೆ ಈವರೆಗೆ ಬಿಜೆಪಿ 4,228 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. 2,265 ಸ್ಥಾನಗಳನ್ನು ಕಾಂಗ್ರೆಸ್ ಬಾಚಿಕೊಂಡಿದೆ.
ಪ್ರಸ್ತುತ ಬಿಜೆಪಿಯೇ ಮೇಲುಗೈ ಸಾಧಿಸಿದ್ದು ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಜೆಡಿಎಸ್ 1,167 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ.
ಕರ್ನಾಟಕದ ಒಟ್ಟು 226 ತಾಲ್ಲೂಕುಗಳ 91,339 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಈ ಪೈಕಿ 8,074 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು ಉಳಿದ 3,11,887 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 43,238 ಮತ್ತು ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ನಡೆದಿತ್ತು. ಡಿ.22 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ 82.04 ರಷ್ಟು ಮತ್ತು ಡಿ.27 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ 80.71 ರಷ್ಟು ಮತದಾನವಾಗಿತ್ತು.