ಬೆಂಗಳೂರು, ಡಿ.31(DaijiworldNews/HR): ಯುಕೆಯಿಂದ ಬಂದಿರುವರಿಂದ ರೂಪಾಂತರ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಅವಶ್ಯಕತೆಯಿದೆ ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಇದನ್ನು ವಿರೋಧಿಸಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಅವಶ್ಯಕತೆಯಿದ್ದು, ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿದ ನಂತರ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ವಿಷಯವನ್ನು ನಿರ್ಧರಿಸಲಾಗುವುದು ಎಂದು ಅಶೋಕ್ ಹೇಳಿದ್ದರು.
ಆದರೆ ಸಚಿವ ಡಾ.ಕೆ.ಸುಧಾಕರ್ ಅವರು, ನಗರ ಮತ್ತು ಇತರೆಡೆಗಳಲ್ಲಿ ಲಾಕ್ಡೌನ್ ಜಾರಿಗೊಳಿಸುವ ಅಗತ್ಯವಿಲ್ಲ ಆದರೆ ಜನರು ಅತ್ಯಂತ ಜಾಗರೂಕರಾಗಿರಬೇಕು. ಹೊಸ ವರ್ಷದ ಸಂದರ್ಭದಲ್ಲಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಅಗತ್ಯ ಮಾತ್ರ ಸಚಿವಾಲಯದ ಮುಂದಿದೆ ಎಂದು ಹೇಳಿದ್ದರು.
ಇನ್ನು ಹೊಸ ವಷಾಚರಣೆಯ ಸಂಭ್ರಮಾಚರಣೆಗೆ ಹಾಕಿರುವ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯಕ್ಕೆ ಈಗಾಗಲೇ ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.