ಬಾಗಲಕೋಟೆ, ಜ.04 (DaijiworldNews/HR): ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಡುವೆ ಕೆಪಿಸಿಸಿ ನಾಯಕತ್ವಕ್ಕೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ತಮ್ಮನ್ನು ಮೂಲೆಗುಂಪು ಮಾಡಬಹುದು ಎಂಬ ಭಯವಿದ್ದು, ಹೇಗಾದರೂ ಮಾಡಿ ಶಿವಕುಮಾರ್ ಅವರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬೇಕೆಂಬ ಆಸೆಯಲ್ಲಿದ್ದಾರೆ" ಎಂದರು.
ಇನ್ನು ಮುಂದಿನ ಮುಖ್ಯಮಂತ್ರಿ ನಾನೇ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಸಿದ್ದರಾಮಯ್ಯನವರು ಇನ್ನು ಕರ್ನಾಟಕದ ಮುಖ್ಯಮಂತ್ರಿಯಾಗಲು ಕನಸಿನಲ್ಲಿ ಕೂಡ ಸಾಧ್ಯವಿಲ್ಲ, ಅವರ ಪಕ್ಷದಲ್ಲಿಯೇ ಹಲವು ನಾಯಕರು ಅವರನ್ನು ಮುಖ್ಯಮಂತ್ರಿಯಾಗಲು ಬಿಡುತ್ತಿಲ್ಲ" ಎಂದು ಹೇಳಿದ್ದಾರೆ.