ಬೆಂಗಳೂರು, ಜ 06 (DaijiworldNews/SM): ಕೇರಳದ ಕೆಲವು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದ.ಕ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಎಚ್ಚರಿಕೆಯಿಂದಿರುವಂತೆ ಪಶುಸಂಗೋಪಣಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಈ ಬಗ್ಗೆ ಸಚಿವರು ಈಗಾಗಲೇ ಪಶುಸಂಗೋಪಣಾ ಇಲಾಖೆ, ಜಿಲ್ಲಾಡಳಿತಗಳ ಜೊತೆ ಚರ್ಚೆ ನಡೆಸಿದ್ದಾರೆ. ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಗಡಿ ಪ್ರದೇಶಗಳಾದ ದ.ಕ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ ಕಂಡುಬಂದಲ್ಲಿ ಎಚ್ಚರಿಕೆಯಿಂದಿರಬೇಕೆಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಜಿಲ್ಲಾ ಮಟ್ಟದ ನಾಯಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಇನ್ನು ಗಡಿ ಭಾಗದ ಜನರು ಅಥವಾ ಕೋಳಿ ಸಾಕಾಣೆ ಮಾಡುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಕೋಳಿ ಸಾಕಾಣಿಕೆ ಸಂದರ್ಭದಲ್ಲಿ ವ್ಯತ್ಯಾಸಗಳು ಕಂಡುಬಂದಲ್ಲಿ ತಕ್ಷಣ ಸಂಬಂಧಿಸಿದ ಪಶುಸಂಗೋಪಣಾ ಇಲಾಖೆಯನ್ನು ಸಂಪರ್ಕಿಸಬೇಕಾಗಿದೆ.