ಗೋಕಾಕ, ಜ.08 (DaijiworldNews/PY): "ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ" ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಗ್ರಾ.ಪಂ.ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಜಯಗಳಿಸಿದ ಹಿನ್ನೆಲೆ ಅಮಿತ್ ಶಾ ಅವರು ಬೃಹತ್ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ.
"ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ದಿಗಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ಸುಮಾರು 100 ಕೋಟಿ. ರೂ.ಗಳ ಅನುದಾನವನ್ನು ಮಂಜೂರಾತಿಗೆ ಕ್ರಿಯಾ ಯೋಜನೆಯೊಂದನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ರವಾನಿಸಲಾಗಿದೆ. ಅನುದಾನವು ಇದೇ ಮಾರ್ಚ್ ಅಂತ್ಯದ ವೇಳೆಗೆ ಬಿಡುಗಡೆಯಾಗುವ ನಿರೀಕ್ಷೆ ಇದೆ" ಎಂದಿದ್ದಾರೆ.