ಮುಂಬೈ, ಜ.09 (DaijiworldNews/PY): ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 10 ಮಕ್ಕಳು ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಆಸ್ಪತ್ರೆಯಲ್ಲಿ ನಡೆದಿದೆ.
"ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ವಾರ್ಡ್ಗೆ ವ್ಯಾಪಿಸಿದೆ" ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
"ಬೆಂಕಿ ಅವಘಡದ ಪರಿಣಾಮ ಹತ್ತು ಮಕ್ಕಳು ಸಾವನ್ನಪ್ಪಿದ್ದು, ಏಳು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಮೃತಪಟ್ಟ ಹತ್ತು ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು" ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
"ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗುವುದು" ಎಂದು ಪೊಲೀಸರು ಹೇಳಿದ್ದಾರೆ.